ಬೆಂಗಳೂರು, ಜೂ.21- ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ ಕಾಂಗ್ರೆಸ್ ಅದನ್ನು ಎದುರಿಸಲು ಸಮರ್ಥವಾಗಿದೆ ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಹೇಳಿದ್ದಾರೆ.
ಮಧ್ಯಂತರ ಚುನಾವಣೆ ನಡೆಯುವುದರಲ್ಲಿ ಸಂಶಯವಿಲ್ಲ ಎಂಬ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದರೆ ನಾವೇನು ಕೈ ಕಟ್ಟಿ ಕೂರಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಗೌಡರು ಯಾವ ಅರ್ಥದಲ್ಲಿ ಈ ಮಾತನ್ನು ಹೇಳಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಎರಡೂ ಪಕ್ಷಗಳ ಮುಖಂಡರು ಮೈತ್ರಿ ಪಾಲನೆ ಮಾಡಿಕೊಂಡು ಬಂದಿದ್ದಾರೆ.ಕೆಲವು ಸಂದರ್ಭಗಳಲ್ಲಿ ಸಣ್ಣ ಪುಟ್ಟ ವ್ಯತ್ಯಾಸವಾಗಿರಬಹುದು ಎಂದರು.
ಸದ್ಯದ ಪರಿಸ್ಥಿತಿಯಲ್ಲಿ ಯಾರೊಬ್ಬರಿಗೂ ಮಧ್ಯಂತರ ಚುನಾವಣೆ ಅಗತ್ಯವಿಲ್ಲ. ನಮ್ಮ ಮೈತ್ರಿ ಪಕ್ಷದ ಮುಖಂಡರೇ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಯಾವುದೇ ಸಂದರ್ಭದಲ್ಲಿ ಬಂದರೂ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ.