ಬೆಂಗಳೂರು, ಜು.4- ಪಕ್ಷ ಸಂಘಟನೆ ಮಾಡುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲಕ್ಕೆ ನಿಲ್ಲುವುದಾಗಿ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಮತ್ತು ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉತ್ತಮ ನಾಯಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ನಮ್ಮ ಪಕ್ಷ ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಕೆಲಸ ಮಾಡುತ್ತದೆ. ಲೋಕಸಭೆ ಚುನಾವಣೆಯ ಸೋಲು ಶಾಶ್ವತವಲ್ಲ, ಎದೆಗುಂದಂತೆ ಕೆಲಸ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಒಂದು ವರ್ಷಗಳ ಕಾಲ ಎಚ್.ವಿಶ್ವನಾಥ್ ಅವರು ಪಕ್ಷದ ಅಧ್ಯಕ್ಷರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಲೋಕಸಭೆಯಲ್ಲಿ ಪಕ್ಷಕ್ಕೆ ಸೋಲಾಗಿದ್ದು, ಸೋಲಿನಿಂದ ನಾವು ಹತಾಶರಾಗಬೇಕಾಗಿಲ್ಲ. ಹೀಗಾಗಿ ಪಕ್ಷ ಸಂಘಟನೆಯತ್ತ ಗಮನ ಹರಿಸೋಣ, ವಿಶ್ವನಾಥ್ ಅವರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಶೀಘ್ರದಲ್ಲೇ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡುವುದಾಗಿ ಹೇಳಿದರು.
ಜೆಡಿಎಸ್ನ ನೂತನ ಕಾರ್ಯಾಧ್ಯಕ್ಷ ಮಧುಬಂಗಾರಪ್ಪ ಮಾತನಾಡಿ, ಚುನಾವಣೆ ಎಂದ ಮೇಲೆ ಸೋಲು-ಗೆಲುವು ಸಹಜ. ಪಕ್ಷಕ್ಕೆ ಯಾವತ್ತೂ ಸೋಲಿಲ್ಲ. ನನ್ನನ್ನು ರಾಜ್ಯಮಟ್ಟದ ನಾಯಕರನ್ನಾಗಿ ಬೆಳೆಸಿದ್ದಲ್ಲದೆ, ಹೊಸ ಜವಾಬ್ದಾರಿಯನ್ನು ನೀಡಲಾಗಿದೆ. ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ.
ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ಕುಮಾರಸ್ವಾಮಿ ಅವರನ್ನು ನೇಮಕ ಮಾಡಿರುವುದಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೋವಾಗಿರಬಹುದು. ಆದರೆ, ನಮ್ಮಲ್ಲೆರ ಒತ್ತಾಯದಿಂದ ನಿಖಿಲ್ ಅವರನ್ನು ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಯಾರೂ ಅನ್ಯತಾ ಭಾವಿಸಬಾರದು ಎಂದರು.
ನಮ್ಮ ತಂದೆ ಎಸ್.ಬಂಗಾರಪ್ಪ ಅವರು ಇದ್ದಾಗ ನನಗೆ ಯುವ ಘಟಕದ ಅಧ್ಯಕ್ಷನಾಗುವುದು ಬೇಡ ಎಂದು ಹೇಳಿದ್ದರು. ಆದರೆ, ಅವರು ನಿಧನರಾದ ನಂತರ ನನ್ನನ್ನು ಯುವ ಘಟಕದ ಅಧ್ಯಕ್ಷನನ್ನಾಗಿ ಮಾಡಿದರು. ಈಗ ಜೆಡಿಎಸ್ಗೆ ನಿಖಿಲ್ ಅವಶ್ಯಕತೆ ಇದೆ. ಮೈತ್ರಿ ಸರ್ಕಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ನೋಡಿಕೊಳ್ಳುತ್ತಾರೆ. ನಾವು ಪಕ್ಷ ಸಂಘಟನೆ ಮಾಡಿ ಬಲಿಷ್ಠವಾಗಿ ಬೆಳೆಸೋಣ ಎಂದು ಕರೆ ನೀಡಿದರು.