ಬೆಂಗಳೂರು, ಜು.9- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಜನರ ವಿಶ್ವಾಸದಿಂದ ರಚನೆಯಾದ ಸರ್ಕಾರವಲ್ಲ. ಚುನಾವಣಾ ಪೂರ್ವದಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿರಲಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದರು.
ಆಡಳಿತ ಪಕ್ಷದ ಅತೃಪ್ತ ಶಾಸಕರು ರಾಜೀನಾಮೆ ನೀಡಿದ ನಂತರ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯನ್ನು ನಾವು ಕಾದು ನೋಡುತ್ತಿದ್ದೇವೆ. ಬಿಜೆಪಿ ಸಂಸದೀಯ ಮಂಡಳಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನಮ್ಮ ಮುಂದಿನ ನಡೆ ಇರುತ್ತದೆ. ಆ ನಿರ್ಧಾರ ತೆಗೆದುಕೊಳ್ಳುವವರೆಗೂ ನಾವು ಕಾದು ನೋಡುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಚುನಾವಣಾ ಪೂರ್ವದಲ್ಲಿ ಜೆಡಿಎಸ್‍ನ್ನು ಬಿಜೆಪಿಯ ಬಿ ಟೀಮ್ ಎಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಟೀಕಿಸಿದ್ದರು. ಆ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂತ ನೀಚ ರಾಜಕಾರಣಿ ನೋಡಿಲ್ಲ ಎಂದು ಕಟುವಾಗಿ ಟೀಕಿಸಿದ್ದರು. ಅಲ್ಲದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ತಾವು ಸಾಂದರ್ಭಿಕ ಶಿಶು ಎಂದು ಹೇಳಿದ್ದರು. ಅಲ್ಲದೆ, ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದರು. 13 ತಿಂಗಳಿಗೆ ಮಾತ್ರ ಅವರ ಅದೃಷ್ಟ ಇತ್ತು. ಅವರ ಅದೃಷ್ಟ ಕೋಟ ಮುಗಿದಿದೆ. ಅವರ ದೌರ್ಬಲ್ಯವೇ ಇಂದಿನ ಈ ಪರಿಸ್ಥಿತಿಗೆ ಕಾರಣ ಎಂದು ಟೀಕಿಸಿದರು.