ಬೆಂಗಳೂರು,ಜು.9-ಅತೃಪ್ತ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಗಂಡಾಂತರದಿಂದ ಪಾರಾಗಲು ಹರಸಾಹಸಪಡುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಳಗ್ಗೆ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಗೌಡರೊಂದಿಗೆ ಸಮಾಲೋಚನೆ ನಡೆಸಿರುವ ಮುಖ್ಯಮಂತ್ರಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಇರುವ ಮಾರ್ಗೋಪಾಯಗಳ ಬಗ್ಗೆ ಸಲಹೆ ಪಡೆದಿದ್ದಾರೆ.
ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅವರ ವಿರುದ್ದ ಕಾನೂನು ಹೋರಾಟ ನಡೆಸುವುದರಿಂದ ಉಂಟಾಗುವ ಲಾಭನಷ್ಟದ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿದೆ.
ಒಟ್ಟಾರೆ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರಕ್ಕೆ ದಿನದಿಂದ ದಿನಕ್ಕೆ ಸಂಕಷ್ಟ ಹೆಚ್ಚುತ್ತಿರುವುದರಿಂದ ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದರ ಬಗ್ಗೆ ಗೌಡರಿಂದ ಮಾರ್ಗದರ್ಶನ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಪಕ್ಷದ ನಾಯಕರೊಂದಿಗೂ ನಿರಂತರ ಸಂಪರ್ಕ, ಸಮಾಲೋಚನೆ ನಡೆಸಿ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಸಿಎಂ ಮುಂದುವರೆಸಿದ್ದಾರೆ.