ಪಕ್ಷೇತರ ಶಾಸಕರ ಅರ್ಜಿ ಹಿಂಪಡೆಯಲು ಸುಪ್ರೀಂಕೋರ್ಟ್‍ನಿಂದ ಅನುಮತಿ

ನವದೆಹಲಿ, ಜು.25- ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ಕ್ಷಿಪ್ರವಾಗಿ ನಡೆಸಲು ಕರ್ನಾಟಕ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರಿಗೆ ಸೂಚನೆ ನೀಡುವಂತೆ ಕೋರಿದ್ದ ಇಬ್ಬರು ಪಕ್ಷೇತರ ಶಾಸಕರ ಅರ್ಜಿ ಹಿಂಪಡೆಯಲು ಸುಪ್ರೀಂಕೋರ್ಟ್ ಇಂದು ಅನುಮತಿ ನೀಡಿದೆ.
ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್ ಅವರು ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸ್ಪೀಕರ್ ಅವರಿಗೆ ಸ್ಪಷ್ಟ ಸೂಚನೆ ನೀಡಬೇಕೆಂದು ಹೈಕೋರ್ಟ್‍ಗೆ ಮನವಿ ಮಾಡಿದ್ದರು.

ಆದರೆ, ಮಂಗಳವಾರ ರಾತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರ್ಕಾರ ಪತನಗೊಂಡ ನಂತರ ಈ ಇಬ್ಬರು ಪಕ್ಷೇತರ ಶಾಸಕರು ತಾವು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಕೋರಿದ್ದರು.
ನಿನ್ನೆ ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಹಾಗೂ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ಪೀಠ ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಗೈರು ಹಾಜರಾದ ಕಾರಣ ತೀರ್ಪನ್ನು ಮುಂದೂಡಿದ್ದರು.
ಇಂದು ಈ ಪ್ರಕರಣದ ವಕೀಲರು ಕಲಾಪಕ್ಕೆ ಹಾಜರಾದ ಹಿನ್ನೆಲೆಯಲ್ಲಿ ಅರ್ಜಿಯನ್ನು ಹಿಂಪಡೆಯಲು ಪಕ್ಷೇತರ ಶಾಸಕರಿಗೆ ಪೀಠವು ಅನುಮತಿ ನೀಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ