ಬೆಂಗಳೂರು,ಆ.5- ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕೆಂಬುದು ನನಗೆ ಗೊತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲವೇ ಪ್ರತಿಪಕ್ಷಗಳ ಸಲಹೆ ಪಡೆಯಬೇಕಾದ ಅಗತ್ಯ ನನಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ನಮ್ಮದು ರಾಷ್ಟ್ರೀಯ ಪಕ್ಷ ಕೇಂದ್ರ ನಾಯಕರಿಂದ ಸಲಹೆ, ಸೂಚನೆಗಳನ್ನು ಪಡೆದೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕಾಗುತ್ತದೆ. ಸಂಪುಟ ವಿಸ್ತರಣೆಯಾಗದ ಕಾರಣ ಅಭಿವೃದ್ದಿ ಕಾರ್ಯಗಳು ಕುಂಠಿತವಾಗಿದೆ ಎಂಬ ಸಿದ್ದರಾಮಯ್ಯನವರ ಆರೋಪಕ್ಕೆ ತಿರುಗೇಟು ನೀಡಿ, ಪ್ರತಿಪಕ್ಷಗಳನ್ನು ಕೇಳಿ ಸಂಪುಟ ವಿಸ್ತರಣೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.
ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 24 ಗಂಟೆಯೊಳಗೆ ಸಂಪುಟ ವಿಸ್ತರಣೆ ಮಾಡಲು ಸಿದ್ದನಿದ್ದೇನೆ. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಕೆಲವು ನಾಯಕರ ಅಭಿಪ್ರಾಯವನ್ನು ಪಡೆಯಬೇಕಾಗುತ್ತದೆ ಎಂದರು.
ನನಗೂ ವಿಸ್ತರಣೆ ಮಾಡಬೇಕೆಂಬ ಆಸೆ ಇದೆ.ಸಂಪುಟ ವಿಸ್ತರಣೆ ಮಾಡಿದರೆ ಎಲ್ಲ ಸಚಿವರು ತಮ್ಮ ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡುತ್ತಾರೆ.ಇಂದು ಸಂಜೆ ನವದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲಿದ್ದೇನೆ. ಅವರು ಹಸಿರುನಿಶಾನೆ ತೋರಿದರೆ 24 ಗಂಟೆಯೊಳಗೆ ಸಂಪುಟ ವಿಸ್ತರಣೆಯಾಗುತ್ತದೆ. ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿಯೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಉತ್ತರ ಕರ್ನಾಟಕದ ಅನೇಕ ಕಡೆ ಪ್ರವಾಹ ಉಂಟಾಗಿರುವುದರಿಂದ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂದು ವೈಮಾನಿಕ ಸಮೀಕ್ಷೆ ನಡೆಸಿ ವರದಿಯನ್ನು ಸಲ್ಲಿಸುತ್ತೇನೆ. ಪ್ರಧಾನಿಯವರನ್ನು ಭೇಟಿಯಾದ ಮೇಲೆ ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ನೀಡುವಂತೆ ಕೋರಲಿದ್ದೇನೆ ಎಂದರು.
ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರಿಗೆ ತೊಂದರೆಯಾಗದಂತೆ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಯಾವುದೇ ಅಧಿಕಾರಿಗಳು ರಜಾ ತೆಗೆದುಕೊಳ್ಳದಂತೆ ಕೆಲಸ ಮಾಡಬೇಕು.ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಯಾರೊಬ್ಬರೂ ಕರ್ತವ್ಯಕ್ಕೆ ಗೈರು ಹಾಜರಾಗದೆ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಸೂಚಿಸಿದರು.
ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಪ್ರಾದೇಶಿಕ ಆಯುಕ್ತರ ಜೊತೆ ಮಾಹಿತಿ ಪಡೆದಿದ್ದೇನೆ. ರಾಜ್ಯದಲ್ಲಿ ಹಣಕಾಸಿನ ತೊಂದರೆಯಿಲ್ಲ.ಅಧಿಕಾರಿಗಳು ಮೈಚಳಿ ಬಿಟ್ಟು ಕೆಲಸ ಮಾಡಬೇಕು.ಇಲ್ಲದ ಸಬೂಬುಗಳನ್ನು ಹೇಳಿದರೆ ನಾನು ಸಹಿಸುವುದಿಲ್ಲ. ಮನೆ, ಮಠ, ಮಕ್ಕಳು ಕಳೆದುಕೊಂಡು ಬೀದಿಗೆ ಬಿದ್ದಿರುವ ಸಂತ್ರಸ್ತರಿಗೆ ಎಲ್ಲ ಸವಲತ್ತುಗಳನ್ನು ನೀಡಬೇಕು, ಎಲ್ಲೆಲ್ಲಿ ಅಗತ್ಯವಿದೆಯೋ ಅಂತಹ ಕಡೆ ಗಂಜಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಲಾಗಿದೆ.
ಅಧಿಕಾರಿಗಳು ಸ್ಥಳದಲ್ಲಿಯೇ ಬೀಡು ಬಿಟ್ಟು ಪರಿಹಾರ ಕಾರ್ಯ ಕೈಗೊಂಡಿದ್ದಾರೆ.ಜನರು ಆತಂತಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ. ನಿಮ್ಮೊಂದಿಗೆ ಸರ್ಕಾರವಿದೆ. ಸಮಸ್ಯೆಗಳನ್ನು ಎದುರಿಸಲು ನಾವು ಸಿದ್ದರಿದ್ದೇವೆ ಎಂದು ಅಭಯ ನೀಡಿದರು.