ಕಾಂಗ್ರೆಸ್ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಪಿ.ಚಿದಂಬರಂ ಬಂಧನ

ನವದೆಹಲಿ, ಆ.22- ಐಎನ್‍ಎಕ್ಸ್ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಬಂಧನ ಕಾಂಗ್ರೆಸ್ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ದೇಶದ ಪ್ರಮುಖ ತನಿಖಾ ಸಂಸ್ಥೆಗಳಾದ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಿಜೆಪಿ ಸರ್ಕಾರದ ವೈಯುಕ್ತಿಕ ಸೇಡು ತೀರಿಸಿಕೊಳ್ಳುವ ಇಲಾಖೆಗಳಾಗಿ ಮಾರ್ಪಟ್ಟಿವೆ ಎಂದು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಐಎನ್‍ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿ. ಚಿದಂಬರಂ ಅವರ ಸಿಬಿಐ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ತನ್ನ ವೈಯುಕ್ತಿಕ ಸೇಡಿಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.

ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅವರು, ಕಳೆದ ಎರಡು ದಿನಗಳಲ್ಲಿ ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ದೊಡ್ಡ ಮಟ್ಟದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಐಎನ್‍ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದ ಇತರೆ ಆರೋಪಿಗಳಾರು ಬಂಧನವಾಗಿಲ್ಲ. ಆದರೆ, ಕಾಂಗ್ರೆಸ್‍ನ ಹಿರಿಯ ಮುಖಂಡ ಪಿ.ಚಿದಂಬರಂರನ್ನು ಏಕಪಕ್ಷೀಯವಾಗಿ ಬಂಧಿಸಲಾಗಿದೆ. ಇದಕ್ಕೆ ಯಾವುದೇ ರೀತಿಯ ಕಾನೂನು ಹಿನ್ನೆಲೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ