ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಮರ್ಪಕವಾಗಿ ಎದುರಿಸಬೇಕು-ಕೇಂದ್ರ ಬಿಜೆಪಿ ನಾಯಕರಿಂದ ರಾಜ್ಯ ನಾಯಕರಿಗೆ ಸೂಚನೆ

ಬೆಂಗಳೂರು, ಸೆ.4- ಅಕ್ರಮ ಹಣದ ವಹಿವಾಟು ನಡೆಸಿರುವ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಮರ್ಪಕವಾಗಿ ಎದುರಿಸಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ಕೊಟ್ಟಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಈ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡು ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿ ಪಕ್ಷಗಳು ಇದನ್ನು ರಾಜಕೀಕರಣಗೊಳಿಸಿದರೆ ನೀವೂ ಕೂಡ ಅಷ್ಟೇ ಸಮರ್ಥವಾಗಿ ಎದುರಿಸಬೇಕೆಂದು ನಿರ್ದೇಶನ ನೀಡಲಾಗಿದೆ.

ಕಳೆದ ರಾತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ ಬಳಿಕ ರಾತ್ರಿಯೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮತ್ತಿತರ ಬಿಜೆಪಿ ವರಿಷ್ಠರು, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಷಿ ಜತೆ ಮಾತುಕತೆ ನಡೆಸಿ ಪರಿಸ್ಥಿತಿಯ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ ಎನ್ನಲಾಗಿದೆ.

ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ಒಂದೆರಡು ದಿನ ಪ್ರತಿಭಟನೆ ನಡೆಸಬಹುದು. ಇದನ್ನು ಆದಷ್ಟು ಎಷ್ಟು ಸಾಧ್ಯವೋ ಅಷ್ಟನ್ನು ರಾಜಕೀಯಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದಕ್ಕೆ ಅವಕಾಶ ನೀಡದಂತೆ ನೀವೂ ಕೂಡ ಪ್ರತ್ಯುತ್ತರ ನೀಡಬೇಕೆಂದು ಸೂಚಿಸಲಾಗಿದೆ.

ಈ ಹಿಂದೆ ಭ್ರಷ್ಟಾಚಾರದ ಪ್ರಕರಣಗಳಲ್ಲಿ ಅನೇಕರು ಜೈಲಿಗೆ ಹೋಗಿ ಬಂದಿದ್ದಾರೆ. ಈಗ ಡಿ.ಕೆ.ಶಿವಕುಮಾರ್ ವಿಚಾರದಲ್ಲೂ ಇಡಿ ಅಧಿಕಾರಿಗಳು ಕಾನೂನು ಪ್ರಕಾರವೇ ಕ್ರಮ ಕೈಗೊಂಡಿದ್ದಾರೆ. ಅಂದು ಐಟಿ, ಇಡಿ, ಸಿಬಿಐ ಸೇರಿದಂತೆ ಕೇಂದ್ರ ಸ್ವಾಯತ್ತ ಸಂಸ್ಥೆಗಳು ಯಾವ ರೀತಿ ಕಾರ್ಯ ನಿರ್ವಹಿಸಿದ್ದವೋ ಅದೇ ರೀತಿ ಈಗಲೂ ಕಾರ್ಯ ನಿರ್ವಹಿಸುತ್ತಿವೆ. ಪ್ರತಿಯೊಂದನ್ನೂ ರಾಜಕೀಯಗೊಳಿಸಬಾರದು. ಇದಕ್ಕೆ ಏನೇ ಅಭಿಪ್ರಾಯಗಳು ವ್ಯಕ್ತವಾದರೂ ಪಕ್ಷ ಸಮರ್ಥವಾಗಿ ಎದುರಿಸಬೇಕೆಂದು ಸೂಚಿಸಲಾಗಿದೆ.

ಈ ಹಿಂದೆ ಸೊಹರಾಬುದ್ದೀನ್ ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ಅಂದಿನ ಗುಜರಾತ್‍ನ ಗೃಹ ಸಚಿವರಾಗಿದ್ದ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಧಿಸಿತ್ತು. ಅಲ್ಲದೇ ವಿಚಾರಣೆ ವೇಳೆ ಅವರು ಪ್ರಭಾವ ಬೀರಬಹುದೆಂಬ ಹಿನ್ನೆಲೆಯಲ್ಲಿ ತವರು ರಾಜ್ಯದಿಂದಲೇ ಅವರನ್ನು ಗಡಿ ಪಾರು ಮಾಡಲಾಗಿತ್ತು. ಗೋದ್ರಾ ಹತ್ಯಾಕಾಂಡದಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ವಿಶೇಷ ತನಿಖಾ ದಳ (ಎಸ್‍ಐಟಿ) ತನಿಖೆಗೆ ಒಳಪಡಿಸಿತ್ತು.

ಅದು ರಾಜಕೀಯ ಪ್ರೇರಿತ ಅಲ್ಲವೆಂದರೆ ಈಗ ಡಿ.ಕೆ.ಶಿವಕುಮಾರ್ ಪ್ರಕರಣವೂ ರಾಜಕೀಯ ಪ್ರೇರಿತವಲ್ಲ. ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಸಮರ್ಥಿಸಿಕೊಳ್ಳಬೇಕು. ಮಾಧ್ಯಮಗಳ ಮುಂದೆ ಎಚ್ಚರಿಕೆಯಿಂದ ಮಾತನಾಡಬೇಕೆಂದು ಸೂಚಿಸಲಾಗಿದೆ.

ಒಂದೆರಡು ದಿನ ಪ್ರತಿಭಟನೆ ನಡೆಸಿ ಸುಮ್ಮನಾಗಬಹುದು. ಮುಂಬರುವ ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈ ಪ್ರಕರಣವನ್ನು ಜೀವಂತವಾಗಿಡಲು ಕಾಂಗ್ರೆಸ್ ಹವಣಿಸುತ್ತಿದೆ. ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರತಿಪಕ್ಷಗಳ ಮುಖಂಡರನ್ನು ಹತ್ತಿಕುವ ಕೆಲಸ ಮಾಡುತ್ತಿದೆ ಎಂಬ ಆರೋಪ 2014ರಿಂದಲೂ ಕೇಳಿ ಬರುತ್ತಿದೆ. ಜನ ಇದಕ್ಕೆ ಕಿವಿಗೊಡುತ್ತಿಲ್ಲ ಎಂಬುದಕ್ಕೆ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ.

ಹೀಗಾಗಿ ಇದನ್ನು ಅತ್ಯಂತ ಜಾಗರೂಕತೆಯಿಂದ ನಿಭಾಯಿಸಬೇಕೆಂದು ಕೇಂದ್ರದ ಬಿಜೆಪಿ ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

ಕಾನೂನು ಸುವ್ಯವಸ್ಥೆ ಹಾಳುಗೆಡವಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರತಿ ಪಕ್ಷಗಳು ಹುನ್ನಾರ ನಡೆಸುತ್ತವೆ. ಸರ್ಕಾರ ಪತನವಾದ ನಂತರ ಹೇಗಾದರು ಮಾಡಿ ಬಿಜೆಪಿಯನ್ನು ಅಭದ್ರಗೊಳಿಸುವ ಕೆಲಸಕ್ಕೆ ಕೈ ಹಾಕಬಹುದು. ಹೀಗಾಗಿ ರಾಜ್ಯ ಬಿಜೆಪಿ ಸರ್ಕಾರ ಸಮರ್ಪಕವಾಗಿ ನಿಭಾಯಿಸಬೇಕು.

ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ನಿರಂತರವಾಗಿ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯಿರಿ, ಸೂಕ್ಷ್ಮ ಮತ್ತ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ಒದಗಿಸುವಂತೆ ಸಲಹೆ ಮಾಡಿದ್ದಾರೆ.

ವಿನಾಯಕನ ಹಬ್ಬ ನಡೆಯುತ್ತಿರುವ ಸಂದರ್ಭದಲ್ಲಿ ಕೆಲವು ಸಮಾಜಘಾತುಕ ಶಕ್ತಿಗಳು ಕೋಮುಗಲಭೆಯನ್ನು ಸೃಷ್ಟಿಸುವ ಸಾಧ್ಯತೆ ಇರುತ್ತದೆ. ಗಣಪತಿ ಮೂರ್ತಿಗಳನ್ನು ವಿರೂಪಗೊಳಿಸುವುದು, ವಿಸರ್ಜನೆ ವೇಳೆ ಕಲ್ಲು ತೂರುವ ಮೂಲಕ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಪ್ರಯತ್ನಿಸುತ್ತಾರೆ. ಗುಪ್ತಚರ ವಿಭಾಗದ ಅಧಿಕಾರಿಗಳ ಸಭೆ ನಡೆಸಿ ಯಾವ ಯಾವ ಕಡೆ ಪರಿಸ್ಥಿತಿ ಸೂಕ್ಷ್ಮವಾಗಿದೆಯೋ ಅಂತಹ ಕಡೆ ಹೆಚ್ಚಿನ ಭದ್ರತೆ ಒದಗಿಸಬೇಕು. ಜಮ್ಮು-ಕಾಶ್ಮೀರದಂತಹ ಅತಿ ಸೂಕ್ಷ್ಮ ರಾಜ್ಯದಲ್ಲೇ ಪರಿಸ್ಥಿತಿಯನ್ನು ನಾವು ನಿಭಾಯಿಸಿರುವಾಗ ಶಾಂತಿ ಪ್ರಿಯರಾದ ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಯಶಸ್ವಿಯಾಗಿಯೇ ನಿಭಾಯಿಸಿರಿ. ಅಪ್ಪಿತಪ್ಪಿಯೂ ಪ್ರತಿಪಕ್ಷಗಳಿಗೆ ಆಹಾರವಾಗಬೇಡಿ ಎಂದು ವರಿಷ್ಠರು ಸೂಚನೆ ಕೊಟ್ಟಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ