ಜಮ್ಮು: ಭಾರತೀಯ ಸೇನೆಯ ಬೆಂಗಾವಲು ಪಡೆಯ ವಾಹನದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿರುವ ಘಟನೆ ಶನಿವಾರ ಬೆಳಗ್ಗೆ ಜಮ್ಮು-ಕಾಶ್ಮೀರದ ಬಾಟೋಟೆ ಪ್ರದೇಶದಲ್ಲಿ ನಡೆದಿದೆ.
ಘಟನಾ ಸ್ಥಳಕ್ಕೆ ರಂಬಾನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಶರ್ಮಾ ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಬಾಟೋಟೆಯ ರಾಷ್ಟ್ರೀಯ ಹೆದ್ದಾರಿ 244ರಲ್ಲಿ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ನಾಗರಿಕರ ವಾಹನವನ್ನು ನಿಲ್ಲಿಸಲು ಪ್ರಯತ್ನಿಸಿದ್ದು, ಈ ಸಂದರ್ಭದಲ್ಲಿ ಸೇನೆ ಮತ್ತು ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿಯೂ ವರದಿ ತಿಳಿಸಿದೆ.
ಉಗ್ರರ ಗ್ರೆನೇಡ್ ದಾಳಿಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ. ಉಗ್ರರಿಗಾಗಿ ಸೇನೆ, ಪೊಲೀಸರು ಹಾಗೂ ಭದ್ರತಾ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.