ಬೆಂಗಳೂರು, ಅ.9-ನಗರದಲ್ಲಿರುವ ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು ಕೂಡಲೇ ಅಧಿಕಾರಿಗಳು ಇದನ್ನು ಸರಿಪಡಿಸಲು ಕ್ರಮ ವಹಿಸಬೇಕೆಂದು ಮೇಯರ್ ಗೌತಮ್‍ಕುಮಾರ್ ಜೈನ್ ಆದೇಶಿಸಿದರು.
ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ಪಾಲಿಕೆಯ ಎಲ್ಲಾ ವಿಭಾಗದ ವಿಶೇಷ ಆಯುಕ್ತರು, ಜಂಟಿ ಆಯುಕ್ತರು ಮತ್ತು ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮೇಯರ್ ಈ ಆದೇಶ ನೀಡಿದರು.
ನಗರದಲ್ಲಿ ಮಳೆ ಅನಾಹುತ ಆಗದಂತೆ ಎಚ್ಚರ ವಹಿಸಬೇಕು. ಯಾವುದೇ ಕಾರಣಕ್ಕೂ ರಸ್ತೆ ಗುಂಡಿಗಳಿಂದಾಗಿ ಜನರಿಗೆ ತೊಂದರೆಯಾಗಬಾರದು ಎಂದು ಹೇಳಿದರು.
ಜನಸಾಮಾನ್ಯರ ಸಮಸ್ಯೆಗಳಿಗೆ ನಾವು ತ್ವರಿತವಾಗಿ ಸ್ಪಂದಿಸಬೇಕಾದರೆ ನೀವೆಲ್ಲ ಅಧಿಕಾರಿಗಳು ನಮ್ಮೊಂದಿಗೆ ಕೈಜೋಡಿಸಬೇಕು. ಬಿಬಿಎಂಪಿ ಅಭಿವೃದ್ಧಿಗೆ ಎಲ್ಲರೂ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಬೈಲಾ ಪ್ರಕಾರ ಸರಿಯಾಗಿರುವ ಯೋಜನೆಗಳನ್ನು ಕೂಡಲೇ ಜಾರಿಗೊಳಿಸಲು ಕ್ರಮವಹಿಸಬೇಕು ಮತ್ತು ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಸಮರ್ಪಕ ರೂಪುರೇಷೆ ಮಾಡಿಕೊಂಡು ಹೆಚ್ಚು ತೆರಿಗೆ ಕ್ರೋಡೀಕರಣಕ್ಕೆ ಮುಂದಾಗಬೇಕು ಎಂದು ಹೇಳಿದರು.
ಆಯುಕ್ತ ಅನಿಲ್‍ಕುಮಾರ್ ಪ್ರತಿಕ್ರಿಯಿಸಿ ಮಳೆ ಅನಾಹುತಗಳಿಗೆ ಸ್ಪಂದಿಸಲು ತೆರೆಯಲಾಗಿರುವ ನಿಯಂತ್ರಣ ಕೊಠಡಿಗಳು ಹಾಗೂ ಪ್ರಹರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿವೆ. ಇದನ್ನು ಇನ್ನೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಎಲ್ಲಾ ಅಧಿಕಾರಿಗಳು ತಮ್ಮ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಚುರುಕಾಗಿ ಕೆಲಸ ನಿರ್ವಹಿಸಬೇಕು.ರಸ್ತೆ ಪಕ್ಕದಲ್ಲಿರುವ ಕಾಲುವೆಗಳು, ಚರಂಡಿಗಳಲ್ಲಿ ತುಂಬಿರುವ ಹೂಳನ್ನು ತೆಗೆಯಬೇಕು ಮತ್ತು ಹೂಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮಳೆ ನೀರು ರಸ್ತೆಯಲ್ಲಿ ನಿಲ್ಲುವುದರಿಂದ ಗುಂಡಿಗಳು ಹೆಚ್ಚಾಗುತ್ತಿವೆ. ಹಾಗಾಗಿ ನೀರು ಸಾರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳಬೇಕು.ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಚರ್ಚಿಸಿ ವೈಜ್ಞಾನಿಕವಾಗಿ ರಸ್ತೆ-ಗುಂಡಿಗಳನ್ನು ಮುಚ್ಚಿಸಿ ಎಲ್ಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ತೆರಿಗೆ ಬಾಕಿ ಉಳಿಸಿಕೊಂಡಿರುವವರ ಹೆಸರನ್ನು ಪಟ್ಟಿ ಮಾಡಿ ತೆರಿಗೆ ವಸೂಲಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದರು.
ಸಭೆಯಲ್ಲಿ ವಿಶೇಷ ಆಯುಕ್ತರಾದ ಅನ್ಬುಕುಮಾರ್, ಲೋಕೇಶ್, ಕಾಂಗ್ರೆಸ್ ಪಕ್ಷದ ನಾಯಕ ಅಬ್ದುಲ್ ವಾಜಿದ್, ಉಪಮೇಯರ್ ರಾಮ್‍ಮೋಹನ್‍ರಾಜ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.