ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆಗೆ ಸಿದ್ಧತೆ

ಬೆಂಗಳೂರು, ಅ.16- ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಮೇಯರ್-ಉಪಮೇಯರ್ ಚುನಾವಣೆ ಸಂದರ್ಭದಲ್ಲೇ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೂ ಚುನಾವಣೆ ನಡೆಸುವುದನ್ನು ಪ್ರಶ್ನಿಸಿ ಕೆಲವು ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹಾಗಾಗಿ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು.

ಇದರಿಂದ ಡಿಸೆಂಬರ್‍ತನಕ ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಯಲಾರದು ಎಂದೇ ಬಹಳಷ್ಟು ಸದಸ್ಯರು ತಿಳಿದುಕೊಂಡಿದ್ದರು.
ಆದರೆ, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷ ವೇಲು ನಾಯ್ಕರ್ ಅವರು ಮೇಯರ್ ಚುನಾವಣೆ ಸಂದರ್ಭದಲ್ಲೇ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೂ ಚುನಾವಣೆ ನಡೆಸಬೇಕೆಂದು ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದರು.

ವೇಲು ನಾಯ್ಕರ್ ಅವರ ಮನವಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿ ಸುನಿಲ್‍ದತ್ ಯಾದವ್ ಅವರು ವಾದ-ವಿವಾದ ಆಲಿಸಿ ಕೂಡಲೇ ಎಲ್ಲ ಸ್ಥಾಯಿ ಸಮಿತಿಗಳಿಗೂ ಚುನಾವಣೆ ನಡೆಸುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಸರ್ಕಾರಕ್ಕೆ ಆದೇಶಿಸಿದ್ದಾರೆ.
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರು ಚುನಾವಣೆಗೆ ಸಿದ್ಧತೆ ಕೈಗೊಂಡಿದ್ದು, ಒಂದೆರಡು ದಿನಗಳಲ್ಲೇ ದಿನಾಂಕ ನಿಗದಿಯಾಗಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ