ಬೆಂಗಳೂರು, ನ.7- ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದರು.
ಚುನಾವಣೆಯಲ್ಲಿ ಸೋತ ನಂತರ ಜೆಡಿಎಸ್ನಲ್ಲಿ ಸಕ್ರಿಯವಾಗಿರಲಿಲ್ಲ. ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸಿಗರಾಗಿದ್ದರೂ ಮಧ್ವರಾಜ್ ಜೆಡಿಎಸ್ನಿಂದ ಸ್ಪರ್ಧಿಸಿದ್ದರು.
ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಕಾಂಗ್ರೆಸ್ -ಜೆಡಿಎಸ್ ಸರ್ಕಾರ ಪತನವಾಗಿ ಮೈತ್ರಿ ಮುರಿದು ಬಿತ್ತು.ರಾಜ್ಯದಲ್ಲಿ ಮೈತ್ರಿ ಸರ್ಕಾರವೇ ಇಲ್ಲದಿರುವಾಗ ಜೆಡಿಎಸ್ನಲ್ಲಿ ಮುಂದುವರಿಯುವ ಅಗತ್ಯವಿಲ್ಲ ಎಂದು ಭಾವಿಸಿ ಜೆಡಿಎಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.