ನವದೆಹಲಿ, ನ.12- ಅಕ್ರಮ ಆಸ್ತಿ ಗಳಿಕೆ ಮತ್ತು ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆ ದಾಖಲಿಸಿಕೊಂಡಿರುವ ಕೇಸ್ಗಳನ್ನು ವಜಾಗೊಳಿಸುವಂತೆ ಕೋರಿ ಕಾಂಗ್ರೆಸ್ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಡಿಕೆಶಿ ಅವರಲ್ಲದೆ ಅವರ ಆಪ್ತರಾದ ಸುನೀಲ್ಕುಮಾರ್ ಶರ್ಮ, ರಾಜೇಂದ್ರ ಮತ್ತು ಆಂಜನೇಯ ಅವರ ಅರ್ಜಿಗಳನ್ನು ಸಹ ನ್ಯಾಯಾಲಯ ತಿರಸ್ಕರಿಸಿದೆ. ಇದರಿಂದಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಕಾನೂನು ಸಮರದಲ್ಲಿ ಮತ್ತೊಂದು ಹಿನ್ನಡೆಯಾಗಿದೆ.
ಬೆಂಗಳೂರು ಮತ್ತು ದೆಹಲಿಯ ಡಿ.ಕೆ.ಶಿವಕುಮಾರ್ ಅವರ ನಿವಾಸಗಳ ಮೇಲೆ ನಡೆದ ದಾಳಿ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ದೂರುಗಳನ್ನು ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು.
ಇದನ್ನು ಪರಿಶೀಲಿಸುವಂತೆ ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ ಡಿ.ಕೆ.ಶಿವಕುಮಾರ್ ಹಾಗೂ ಆಪ್ತರಿಗೆ ಕಾನೂನು ಸಂಕಷ್ಟ ಎದುರಾಗಿದೆ.
ಡಿ.ಕೆ.ಶಿವಕುಮಾರ್ ಅವರು ಕೋಟ್ಯಂತರ ರೂ.ಮೌಲ್ಯದ ಅಕ್ರಮ ಆಸ್ತಿ ಹೊಂದಿದ್ದಾರೆ ಮತ್ತು ಹವಾಲಾ ಮೂಲಕ ಹಣ ವರ್ಗಾವಣೆ ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದರು.
ಐಟಿ ದಾಖಲಿಸಿರುವ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇದೆ. ಮತ್ತು ದಾಖಲಾಗಿರುವ ದೂರುಗಳು ಆಧಾರರಹಿತವಾಗಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಕೈಬಿಡುವಂತೆ ಕೋರಿ ಶಿವಕುಮಾರ್ ಮತ್ತು ಅವರ ಆಪ್ತರ ಪರವಾಗಿ ವಕೀಲರು ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.