ಗುವಾಹಟಿ, ಡಿ.11- ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯ ಅಸ್ಸೋಂನಲ್ಲಿ ಎರಡನೆ ದಿನವಾದ ಇಂದು ಸಹ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿವೆ.
ರಸ್ತೆ ತಡೆ ಚಳವಳಿ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಉದ್ರಿಕ್ತ ವಿದ್ಯಾರ್ಥಿಗಳನ್ನು ಚದುರಿಸಲು ಪೋಲೀಸರು ಬಲ ಪ್ರಯೋಗಿಸಿದರು. ಈ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.
ವಿದ್ಯಾರ್ಥಿ ಸಂಘಟನೆಗಳು ರಾಜಧಾನಿ ಗುವಾಹಟಿಯ ಜಿಎಸ್ ರಸ್ತೆಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕೆ ದಾವಿಸಿದ ಪೋಲೀಸರು ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸುವ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆಯಿತು.
ವಿದ್ಯಾರ್ಥಿಗಳ ಗುಂಪನ್ನು ಚದುರಿಸಲು ಪೋಲೀಸರು ಲಾಠಿ ಪ್ರಹಾರ ಮತ್ತು ಅಶ್ರುವಾಯು ಸಿಡಿಸಿದರು. ಈ ಘಟನೆಯಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಜಿಎಸ್ ರಸ್ತೆಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚುವರಿ ಪೋಲೀಸರನ್ನು ನಿಯೋಜಿಸಲಾಗಿದೆ.