ನವದೆಹಲಿ, ಡಿ.16-ಪೌರತ್ವ ತಿದ್ದುಪಡಿ ಕಾಯ್ದೆ (ಸಿಐಎ) ವಿರುದ್ಧ ದೇಶದ ವಿವಿಧೆಡೆ ನಡೆಯುತ್ತಿರುವ ವ್ಯಾಪಕ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಸಮಾಜಕ್ಕೆ ಆಘಾತಕಾರಿಯಾಗುವ ಇಂತಹ ಪ್ರತಿಭಟನೆಗಳನ್ನು ತಕ್ಷಣ ನಿಲ್ಲಿಸುವಂತೆ ಖಡಕ್ ಎಚ್ಚರಿಕೆ ನೀಡಿದೆ.
ರಾಜಧಾನಿ ದೆಹಲಿಯ ಜಮಿಯಾ ಮಿಲಿಯಾ ಇಸ್ಲಾಮಿಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿನ್ನೆ ರಾತ್ರಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲೀಸರು ನಡೆಸಿದ ಬಲ ಪ್ರಯೋಗ ಮತ್ತು ಹಿಂಸಾಚಾರದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ನಾವು ಶಾಂತಿಯುತ ಪ್ರತಿಭಟನೆಗೆ ಎಂದಿಗೂ ವಿರೋಧಿಸುವುದಿಲ್ಲ. ಪ್ರತಿಭಟನೆ ಸಂವಿಧಾನಾತ್ಮಕ ಹಕ್ಕು. ಆದರೆ ಹಿಂಸಾಚಾರ ನಡೆಸಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಅಡ್ಡಿ ಉಂಟು ಮಾಡುವುದನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ಪೀಠ ಸ್ಪಷ್ಟ ಮಾತುಗಳಲ್ಲಿ ಹೇಳಿತು.
ದೇಶದ ವಿವಿಧೆಡೆ ವಿಧೇಯಕ ಸಂಬಂಧ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳನ್ನು ತಕ್ಷಣ ನಿಲ್ಲಿಸಬೇಕು. ಇದು ಕೂಡಲೇ ನಿಲುಗಡೆಯಾಗಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದು ಅವರು ಹೇಳಿದರು.
ಜಾಮಿಯ ಮಿಲಿಯಾ ಇಸ್ಲಾಮಿಯ ವಿವಿಯ ವಿದ್ಯಾರ್ಥಿಗಳು ಈ ಪ್ರತಿಭಟನೆಯನ್ನು ತಕ್ಷಣವೇ ನಿಲ್ಲಿಸಬೇಕು. ಆನಂತರವಷ್ಟೇ ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಮುಂದುವರೆಸಲಿದೆ. ತಕ್ಷಣಕ್ಕೆ ಈ ಅರ್ಜಿ ವಿಚಾರಣೆ ನಡೆಸಲು ಸಾಧ್ಯವೇ ಇಲ್ಲ ಎಂದು ನ್ಯಾಯ ಪೀಠ ಸ್ಪಷ್ಟಪಡಿಸಿತು.
ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಾಳೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಸಿಐಎ ಸಂಬಂಧ ನಿನ್ನೆ ರಾತ್ರಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲೀಸರು ದೌರ್ಜನ್ಯ ಎಸಗಿದ್ದಾರೆ. ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗದಲ್ಲಿ ಅನೇಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪೋಲೀಸರ ವಿರುದ್ಧ ಕ್ರಮಕೈಗೊಳ್ಳಲು ಆದೇಶ ನೀಡಬೇಕೆಂದು ಕೋರಿ ಅನೇಕ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.