ಬೆಂಗಳೂರು, ಡಿ.20- ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಹೊರಗಿನಿಂದ ಬರುವ ಯಾವುದೇ ನಾಯಕರಿಗೆ ಜಿಲ್ಲಾಡಳಿತ ಪ್ರವೇಶ ನೀಡದಂತೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಪರಿಸ್ಥಿತಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಇಂತಹ ಸಂದರ್ಭದಲ್ಲಿ ಹೊರಗಿನಿಂದ ಬಂದವರು ಪುನಃ ಪ್ರಚೋದನಕಾರಿ ಭಾಷಣ ಮಾಡಿ ಜನರನ್ನುಉದ್ವೇಗಗೊಳಿಸಬಹುದು. ಹೀಗಾಗಿ ಜಿಲ್ಲಾಡಳಿತ ಹೊರಗಿನವರು ಪ್ರವೇಶ ಮಾಡದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ನಾಯಕರು ಮಂಗಳೂರಿಗೆ ಹೋಗುವುದು ಬೇಡ. ನೀವು ಹೋಗುತ್ತೀರೆಂಬ ಕಾರಣಕ್ಕೆ ಮತ್ತೊಬ್ಬರು ಹೋಗುತ್ತಾರೆ. ಇದರಿಂದ ಕಾನೂನು ಸುವ್ಯವಸ್ಥೆ ಹಾಳಾಗಲಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಯಾರೂ ಹೋಗುವುದು ಬೇಡ ಎಂದು ಮನವಿ ಮಾಡಿದರು.
ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಜಮೀರ್ ಸೇರಿದಂತೆ ಯಾರೂ ಕೂಡ ಇನ್ನು ಎರಡು ದಿನಗಳ ಕಾಲ ಅಲ್ಲಿಗೆ ಭೇಟಿ ನೀಡಬಾರದು. ನೀವು ಹೋಗಿ ಪೆಟ್ರೋಲ್ ಸುರಿದರೆ ಮತ್ತೊಬ್ಬರು ಬೆಂಕಿ ಹಚ್ಚುತ್ತಾರೆ ಎಂದು ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದರು.
ನಿನ್ನೆ ನಡೆದ ಘಟನೆ ಅತ್ಯಂತ ವಿಷಾದಕರ. ದಕ್ಷಿಣ ಕನ್ನಡ ಶಾಂತಿ ಮತ್ತು ಸುವ್ಯವಸ್ಥೆಗೆ ಹೆಸರುವಾಸಿಯಾದ ಜಿಲ್ಲೆ.ಇದ್ದಕ್ಕಿದ್ದಂತೆ ಕೆಲವು ಕಿಡಿಗೇಡಿಗಳು ಪೋಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹೊರಗಿನಿಂದ ಬಂದ ಗೂಂಡಾಗಳೇ ಇದಕ್ಕೆ ಕಾರಣ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಯಾವುದೇ ಒಂದು ಧರ್ಮವನ್ನು ಗುರಿಯಾಗಿಟ್ಟುಕೊಂಡು ಪೌರತ್ವ ತಿದ್ದುಪಡಿ ಮಸೂದೆಯನ್ನು ಜಾರಿ ಮಾಡಿಲ್ಲ. ಇದರ ಉದ್ದೇಶವನ್ನು ಯಾರೂ ಅರ್ಥ ಮಾಡಿಕೊಳ್ಳುತ್ತಿಲ್ಲ. ಯಾವುದೇ ಭಾರತೀಯ ಪೌರನಿಗೆ ಈ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತಿತರ ರಾಷ್ಟ್ರಗಳಿಂದ ಕಾನೂನು ಬಾಹಿರವಾಗಿ ದೇಶದಲ್ಲಿ ನೆಲೆಸಿರುವ ಹಾಗೂ ಅಕ್ರಮ ನುಸುಳುಕೋರರನ್ನು ಹಿಮ್ಮೆಟ್ಟಿಸಲು ಕಾಯ್ದೆ ಜಾರಿ ಮಾಡಲಾಗಿದೆ. ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಹಿಂದೂಗಳ ಸಂಖ್ಯೆ ಕ್ಷೀಣಿಸುತ್ತಿದೆ. ಭಾರತ ಮಾತ್ರ ಸರ್ವಧರ್ಮಗಳ ರಾಷ್ಟ್ರ. 1971ರ ಯುದ್ಧದ ಬಳಿಕ ಪಾಕಿಸ್ತಾನದಲ್ಲಿ ಹಿಂದೂಗಳ ಮಾರಣಹೋಮ ನಡೆಯಿತು. ವಲಸಿಗರನ್ನು ತಡೆಗಟ್ಟುವ ಕಾರಣಕ್ಕಾಗಿ ಕಾಯ್ದೆ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಇದೇ ವೇಳೆ ಸದಾನಂದಗೌಡ ಪ್ರಾರ್ಥಿಸಿದರು.