ಕಾವೇರಿ ಅಂತಿಮ ತೀರ್ಪಿಗೆ ಕ್ಷಣಗಣನೆ: ರಾಜ್ಯದಲ್ಲಿ ಬಿಗಿಭದ್ರತೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಂತಿಮ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ಕೆಆರ್ ಎಸ್, ಮಂಡ್ಯ, ಬೆಂಗಳೂರು ಮತ್ತು ತಮಿಳುನಾಡು ಗಡಿ ಪ್ರದೇಶದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಕಾವೇರಿ ಅಂತಿಮ ತೀರ್ಪು ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ 15 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇನ್ನು ಹೆಚ್ಚುವರಿಯಾಗಿ ಕರ್ನಾಟಕ ರಾಜ್ಯ ಮೀಸಲು ಪಡೆಯನ್ನು ನಿಯೋಜಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಅಂತೆಯೇ ಕೆಆರ್ ಎಸ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಡ್ಯ, ಮದ್ದೂರು, ಮೈಸೂರು ಹಾಗೂ ತಮಿಳುನಾಡು ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕಾವೇರಿ ನ್ಯಾಯಾಧೀಕರಣದ ಐ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಮತ್ತು ತಮಿಳುನಾಡು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು. ಈ ವಿಶೇಷ ಮೇಲ್ಮನವಿಯ ವಿಚಾರಣೆಯನ್ನು 2016ರ ಅಕ್ಟೋಬರ್ ರಿಂದ ಆರಂಭಿಸಿದ ಸುಪ್ರೀಂ ನ್ಯಾಯಪೀಠ 2017ರ ಸೆಪ್ಟೆಂಬರ್ ನಲ್ಲಿ ವಿಚಾರಣೆ ಪೂರ್ಣಗೊಳಿಸಿತ್ತು.
ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಡಿವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ರಚಿಸಲಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ