ಬೆಂಗಳೂರು: ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಎಲ್ಲ ಪಕ್ಷಗಳ ಮುಖಂಡರು, ಶಿಕ್ಷಣವೂ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಭೆ ನಡೆಸಿ ತೀರ್ಮಾನ ಆಗುವವರೆಗೆ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಶಾಲೆಗಳ ಆರಂಭ ಹಾಗೂ ಶಿಕ್ಷಣ ಇಲಾಖೆಯ ವಿದ್ಯಾಗಮ ಕಾರ್ಯಕ್ರಮದ ಪರ-ವಿರೋಧ ಚರ್ಚೆಗಳಿಗೆ ಸಂಬಂಸಿದಂತೆ ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿರುವ ಸಿಎಂ, ಕೊರೋನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತಂತೆ ಪರ ಮತ್ತು ವಿರೋಧದ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳೂ ಅಭಿಯಾನ ಆರಂಭಿಸಿರುವುದನ್ನು ಗಮನಿಸಿದ್ದೇನೆ. ಅಲ್ಲದೆ, ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರೂ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಎಲ್ಲವನ್ನೂ ಗಂಭೀರವಾಗಿ ಪರಿಗಣಿಸಿದ್ದೇನೆ ಎಂದಿದ್ದಾರೆ.
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ ಎಲ್ಲ ಪಕ್ಷಗಳ ಮುಖಂಡರು, ತಜ್ಞರು ಮತ್ತು ಹಿರಿಯ ಅಕಾರಿಗಳ ಸಭೆ ಕರೆದು ಸಾಧಕ-ಬಾಧಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಊಹಾಪೊಹ ಮತ್ತು ವದಂತಿಗಳಿಗೆ ಕಿವಿಗೊಡಬಾರದೆಂದು ಪೊಷಕರಲ್ಲಿ ಮನವಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.