ಬೆಂಗಳೂರು,ಏ.8- ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಚಿವರು ಪ್ರಗತಿ ಪರಿಶೀಲನೆ ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈಗಾಗಲೇ ಕೇಂದ್ರ ಚುನಾವಣಾ ಆಯೋಗವು ವಿಧಾನಸಭೆ ಚನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರು, ಯಾವುದೇ ರೀತಿಯ ಪ್ರಗತಿ ಪರಿಶೀಲನೆ ಸಭೆ, ಇಲ್ಲವೇ ಅಧಿಕಾರಿಗಳ ಜತೆ ಸಭೆ ನಡೆಸುವುದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ನಾವು ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಕೆಲವರು ಪ್ರಗತಿ ಪರಿಶೀಲನಾ ಸಭೆ ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರವಹಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.