ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು: ಸರ್ಕಾರ ಆದೇಶ

 

ಬೆಂಗಳೂರು, ಏ.11-ಬೇಸಿಗೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಲು ಸರ್ಕಾರ ಆದೇಶಿಸಿದೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೇಸಿಗೆ ಬಿಸಿಲು ತೀವ್ರವಾಗಿರುವುದರಿಂದ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ ಯಾವುದೇ ರೀತಿ ಅನಾನುಕೂಲವಾಗದಂತೆ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನೀರು ಪೂರೈಕೆ ಮಾಡಬೇಕು. ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್‍ಗಳ ಮೂಲಕ ಎಸ್‍ಡಿಆರ್‍ಎಫ್ ಮಾರ್ಗಸೂಚಿ ಪ್ರಕಾರ ನೀರು ಸರಬರಾಜು ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಕುಡಿಯುವ ನೀರಿನ ಸರಬರಾಜಿಗೆ ಸಂಬಂಧಿಸಿದ ಬಿಲ್ಲುಗಳನ್ನು 15 ದಿನದೊಳಗೆ ಪಾವತಿಸಲು ಕ್ರಮಕೈಗೊಳ್ಳಲಾಗಿದೆ. ಕುಡಿಯುವ ನೀರಿಗಾಗಿ ತಗಲುವ ವೆಚ್ಚವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದಿಂದ ಭರಿಸಲು ಕಂದಾಯ ಇಲಾಖೆ ಸೂಚನೆ ನೀಡಿದೆ.

ಇತ್ತೀಚೆಗೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿಯ ತೀರ್ಮಾನದಂತೆ ಬೇಸಿಗೆಯಲ್ಲಿ ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರು ಸಮರ್ಪಕವಾಗಿ ಪೂರೈಸಲಾಗುತ್ತಿದೆಯೇ ಎಂಬುದನ್ನು ಆಗಾಗ್ಗೆ ಪರಿಶೀಲಿಸುವಂತೆ ಸೂಚಿಸಲಾಗಿತ್ತು.
ಈ ಬಾರಿ ರಾಜ್ಯಸರ್ಕಾರ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡದಿದ್ದರೂ ರಾಜ್ಯದ 119 ಹಳ್ಳಿಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಈ ಹಳ್ಳಿಗಳಿಗೆ 147 ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 18 ಗ್ರಾಮಗಳಿಗೆ 40 ಟ್ಯಾಂಕರ್‍ಗಳ ಮೂಲಕ ನಿತ್ಯ 2 ಬಾರಿ ನೀರನ್ನು ಸರಬರಾಜು ಮಾಡಲಾಗುತ್ತಿದೆ.

ಮಲೆನಾಡು ಭಾಗದ ಚಿಕ್ಕಮಗಳೂರು ಜಿಲ್ಲೆಯ 53 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, 56 ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನೀರಿನ ಅಭಾವ ಹೆಚ್ಚಿರುವ ಕಡೆ ಅಂದರೆ ಚಿಕ್ಕಬಳ್ಳಾಪುರ, ಹಾಸನ, ಬಳ್ಳಾರಿ ಮತ್ತಿತರ ಜಿಲ್ಲೆಗಳಲ್ಲಿ 127 ಖಾಸಗಿ ಬೋರ್‍ವೆಲ್‍ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಕರಾವಳಿಯ ಭಾಗದ ಉತ್ತರ ಕನ್ನಡ ಜಿಲ್ಲೆಯಲ್ಲಿ 4, ಚಿಕ್ಕಬಳ್ಳಾಪುರ ಜಿಲ್ಲೆಯ 5, ಹಾಸನ ಜಿಲ್ಲೆಯ 8, ಬಳ್ಳಾರಿ ಜಿಲ್ಲೆಯ 2, ಮಂಡ್ಯ ಜಿಲ್ಲೆಯ 17, ತುಮಕೂರು ಜಿಲ್ಲೆಯ 10, ದಾವಣಗೆರೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಲಾ ಒಂದು ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವವಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಸಲು ಕಂದಾಯ ಇಲಾಖೆ ಕ್ರಮಕೈಗೊಂಡಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ