ನವದೆಹಲಿ, ಏ.13- ಉನ್ನಾವೊ ಮತ್ತು ಕತುವಾ ಅತ್ಯಾಚಾರ ಪ್ರಕರಣಗಳು ರಾಷ್ಟ್ರಾದ್ಯಂತ ಭಾರೀ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗಳ ಸಂಬಂಧ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ನಿನ್ನೆ ಮಧ್ಯರಾತ್ರಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿನೂತನ ಬೃಹತ್ ಪ್ರತಿಭಟನೆ ನಡೆಯಿತು.
ಇಂಡಿಯಾ ಗೇಟ್ಗೆ ಮೊಂಬತ್ತಿ ಮೆರವಣಿಗೆ ನೇತೃತ್ವ ವಹಿಸಿದ್ದ ರಾಹುಲ್, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಮೋದಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡರು.
ಮಹಿಳೆಯರು ಹೊರ ಹೋಗಲು ಹೆದರುವಂಥ ಭಯದ ವಾತಾವರಣ ಕೇಂದ್ರದಲ್ಲಿ ನಿರ್ಮಾಣವಾಗಿದೆ. ವನಿತೆಯರಿಗೆ ರಕ್ಷಣೆ ನೀಡಲು ಕೇಂದ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪ್ರಧಾನಿ ಮೋದಿ ಅವರು ಬೇಟಿ ಬಚಾವೋ(ಹೆಣ್ಣುಮಕ್ಕಳ ರಕ್ಷಣೆ) ಮಾತುಗಳನ್ನು ಆಡಿದ್ದಾರೆ. ಆದರೆ ಅವರು ನುಡಿದಂತೆ ನಡೆಯುತ್ತಿಲ್ಲ ಎಂದು ಟೀಕಿಸಿದರು.
ಇಂಡಿಯಾ ಗೇಟ್ ಬಳಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಅವರ ಪತ್ನಿ ರಾಬರ್ಟ್ ವಾದ್ರಾ, ರಾಜ್ಯಸಭೆ ವಿರೋಧಪಕ್ಷದ ನಾಯಕ ಗುಲಾಂ ನಬಿ ಅಜಾದ್ ಮೊದಲಾದವರು ಪಾಲ್ಗೊಂಡರು.
ಅಸಂಖ್ಯಾತ ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ಉತ್ತರಪ್ರದೇಶದ ಸರ್ಕಾರವ ವಿರುದ್ಧ ಘೋಷಣೆಗಳನ್ನು ಕೂಗಿದರು.