ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿದ್ದರೆ ಸಿಎಂ ದಾಖಲೆ ಬಿಡುಗಡೆ ಮಾಡಲಿ: ಯಡಿಯೂರಪ್ಪ ಸವಾಲು

 

ಬೆಂಗಳೂರು,ಏ.30- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿಯಾಗಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯನ್ನು ಬಿಡುಗಡೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಭಯ ನಾಯಕರು ಭೇಟಿಯಾಗಿದ್ದರ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲು ಸಿದ್ದರಾಮಯ್ಯನವರು ಏಕೆ ಮೀನಾಮೇಷ ಎಣಿಸಬೇಕು ಎಂದು ಪ್ರಶ್ನಿಸಿ, ಚುನಾವಣಾ ಸಮಯದಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಸುಳ್ಳುಆಪಾದನೆ ಮಾಡಿದ್ದಾರೆ ಎಂದು ದೂರಿದರು.

ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದಾಗಿ ಸಿದ್ದರಾಮಯ್ಯ ಮನಸಿಗೆ ಬಂದಂತೆ ಸುಳ್ಳು ಹೇಳುತ್ತಿದ್ದಾರೆ. ಅವರ ಮಾತನ್ನು ಯಾರೊಬ್ಬರು ನಂಬುವುದಿಲ್ಲ. ಅಧಿಕಾರ ಹೋಗುತ್ತದೆ ಎಂಬ ಹತಾಶೆಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಫಲಿತಾಂಶ ಬಂದ ಮೇಲೆ ಸಿದ್ದರಾಮಯ್ಯನವರ ಹಣೆಬರಹ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ತಲೆತಿರುಕರಂತೆ ಮಾತನಾಡುವುದನ್ನು ನಿಲ್ಲಿಸಬೇಕು. ದಾಖಲೆಗಳಿದ್ದರೆ ಬಿಡುಗಡೆ ಮಾಡಲು ಏಕೆ ವಿಳಂಬ ಮಾಡುತ್ತೀದ್ದೀರಿ. ದೆಹಲಿಯಲ್ಲಿ ಇಬ್ಬರು ಭೇಟಿ ಮಾಡಿದ್ದಾರೆಂದು ಯಾವ ಆಧಾರದ ಮೇಲೆ ಹೇಳಿದ್ದೀರಿ. ಸೋಲುವ ಭಯದಿಂದ ಮನಬಂದಂತೆ ಮಾತನಾಡುವುದನ್ನು ನಿಲ್ಲಿಸದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮಾತು ಆಮೇಲೆ. ಮೊದಲು ಚಾಮುಂಡೇಶ್ವರಿ ಹಾಗೂ ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದು ತೋರಿಸಲಿ. ಸೋಲುವ ಭೀತಿಯಿಂದಾಗಿಯೇ ಅವರು ಬಾದಾಮಿಗೆ ವಲಸೆ ಹೋಗಿದ್ದಾರೆ. ಎರಡು ಕಡೆ ಸೋತು ಮನೆ ಸೇರುವುದರಲ್ಲಿ ಸಂದೇಹ ಬೇಡ ಎಂದು ಯಡಿಯೂರಪ್ಪ ಭವಿಷ್ಯ ನುಡಿದರು.

ಚುನಾವಣೆ ಪ್ರಾರಂಭವಾಗುವ ಮುನ್ನವೇ ಸಿದ್ದರಾಮಯ್ಯ ಸೋಲು ಒಪ್ಪಿಕೊಂಡಿದ್ದಾರೆ. ಬಿಜೆಪಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರ ಹಿಡಿಯುವ ಸಾಧ್ಯತೆಗಳಿರುವುದರಿಂದಲೇ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದಿದ್ದೇನೆ. ನನ್ನ ಬಗ್ಗೆ ಲಘುವಾಗಿ ಮಾತನಾಡಿದರೆ ನಾನೇನು ಮಾಡಲಿ ಎಂದು ಪ್ರಶ್ನಿಸಿದರು.

ವಾಸ್ತವ ತಿಳಿದುಕೊಳ್ಳುವ ವ್ಯವಧಾನ ಸಿದ್ದರಾಮಯ್ಯನವರಿಗೆ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ಅವರ ಭ್ರಮೆಗೆ ಮೇ 15ರ ಫಲಿತಾಂಶ ಉತ್ತರ ನೀಡಲಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ