ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರವಾಗದಂತೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು: ಸಚಿವ ಡಿ.ಕೆ.ಶಿವಕುಮಾರ್

 

ಬೆಂಗಳೂರು, ಜೂ.17-ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರವಾಗದಂತೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು, ಸಲಹೆ ಅಥವಾ ಟೀಕೆಗಳಿದ್ದರೆ ಅದನ್ನು ಪಕ್ಷದ ವೇದಿಕೆಯಲ್ಲೇ ಚರ್ಚೆ ಮಾಡಬೇಕು. ಅದನ್ನು ಬಿಟ್ಟು ಬಹಿರಂಗ ಹೇಳಿಕೆ ಸರಿಯಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಳೆದ ಮೂರು ದಿನಗಳಿಂದೀಚೆಗೆ ಜೆಡಿಎಸ್-ಕಾಂಗ್ರೆಸ್ ನಾಯಕರ ನಡುವೆ ಸಣ್ಣಮಟ್ಟದ ವಾಕ್ಸಮರ ಆರಂಭವಾಗಿದ್ದು, ಪ್ರತ್ಯೇಕ ಬಜೆಟ್ ಮಂಡನೆ ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಸರ್ಕಾರದ ಆಯುಷ್ಯ ಕುರಿತು ಚರ್ಚೆಗಳು ಆರಂಭವಾಗಿದ್ದು, ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮನೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸುಮಾರು 2 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು.
ಹೊಸ ಬಜೆಟ್, ಸಾಮಾನ್ಯ ಕನಿಷ್ಠ ಕಾರ್ಯಕ್ರಮ, ಕಾಂಗ್ರೆಸ್ ಪ್ರಣಾಳಿಕೆ ಹಾಗೂ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಜೆಡಿಎಸ್ ಅಥವಾ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರಾಗಲಿ, ಉಪಮುಖ್ಯಮಂತ್ರಿ ಅಥವಾ ಶಾಸಕಾಂಗ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಬೇಕು. ಅನಗತ್ಯ ಗೊಂದಲವಾಗಬಾರದು. ಉಪಮುಖ್ಯಮಂತ್ರಿ ಅವರ ಬಳಿ ಚರ್ಚೆ ಮಾಡಿ ಅಸಮಾಧಾನಗಳಿದ್ದರೆ ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸಿ ಎಂದರು.
ಸಾಲ ಮನ್ನಾ ವಿಚಾರದಲ್ಲಿ ಈಗಾಗಲೇ ಚರ್ಚೆ ನಡೆದಿದೆ. ಆರ್ಥಿಕ ಸ್ಥಿತಿಗತಿ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ರೈತರಿಗೆ ಸಹಾಯ ಮಾಡುವ ವಿಷಯದಲ್ಲಿ ಕಾಂಗ್ರೆಸ್ ಸದಾ ಬೆಂಬಲ ನೀಡುತ್ತದೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಕೂಡ ಸರ್ಕಾರಕ್ಕೆ ಸ್ವಲ್ಪ ಸಮಯ ನೀಡಬೇಕು. ಪ್ರತಿಯೊಬ್ಬರು ನೀಡುವ ಹೇಳಿಕೆಗಳಲ್ಲೂ ಅರ್ಥ ಹುಡುಕುತ್ತಾ ಹೋಗಬಾರದು. ಉತ್ತಮ ಮಳೆಯಾಗಿದೆ, ಜನತೆ ಶಾಂತಿಯಿಂದ ಇದ್ದಾರೆ. ರಾಜ್ಯ ತಣ್ಣಗಿದೆ. ಪರಿಸ್ಥಿತಿ ಹಾಗೆಯೇ ಇರಲಿ. ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದರು.
ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ತಮಗೆ ದೀಕ್ಷೆ ನೀಡಿದ್ದಾರೆ. ಅದರಂತೆÉ ಸರ್ಕಾರ ನಡೆಯಬೇಕಿದೆ. ಈ ನಡುವೆ ಯಾವುದೇ ಗೊಂದಲ ಉಂಟಾಗದಂತೆ ನಾಯಕರು ಸಹಕರಿಸುವಂತೆ ಮನವಿ ಮಾಡಿದರು.
ಪ್ರತ್ಯೇಕ ಬಜೆಟ್ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಹಿಂದಿನ ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ಮುಂದುವರೆಯುತ್ತದೆ. ಆರೋಗ್ಯ ಇಲಾಖೆಯಲ್ಲಿ ಹಲವಾರು ಯೋಜನೆಗಳನ್ನು ಒಟ್ಟುಗೂಡಿಸಿ ಸಮಗ್ರ ಯೋಜನೆ ರೂಪಿಸಿದ್ದೇವೆ. ಆ ರೀತಿ ಕಾರ್ಯಕ್ರಮ ಮುಂದುವರೆಸುತ್ತೇವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ