ನವದೆಹಲಿ: ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದ, ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಕಾವೇರಿ ನದಿ ಪಾತ್ರದ ರೈತರ ಸಂಕಷ್ಟ ಸೇರಿದಂತೆ ಪ್ರಮುಖ ವಿಷಯಗಳು ಲೋಕಸಭೆಯಲ್ಲಿಂದು ಪ್ರತಿಧ್ವನಿಸಿ ಭಾರೀ ಗದ್ದಲ-ಕೋಲಾಹಲದ ವಾತಾವರಣಕ್ಕೆ ಕಾರಣವಾಯಿತು. ಈ ವಿಷಯಗಳನ್ನು ಮುಂದಿಟ್ಟುಕೊಂಡು ವಿವಿಧ ಪಕ್ಷಗಳು ಭಾರೀ ಪ್ರತಿಭಟನೆಗಳನ್ನು ಮಾಡಿದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಿದ ನಂತರ ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್, ಶಿವಸೇನೆ, ಎಐಎಡಿಎಂಕೆ ಈ ವಿಷಯಗಳನ್ನು ಪ್ರಸ್ತಾಪಿಸಿ ಪ್ರತಿಭಟನೆ ನಡೆಸಿದವು. ರಫೇಲ್ ಫೈಟರ್ ಜೆಟ್ ವಿಮಾನ ಖರೀದಿ ಒಪ್ಪಂದದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಜಂಟಿ ಸಂಸದೀಯ ಸಮಿತಿ(ಜೆಪಿಸಿ) ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರೆ, ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿವಸೇನಾ ಸದಸ್ಯರು ಬಿಗಿಪಟ್ಟು ಹಿಡಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿರುವ ತಮಿಳುನಾಡು ರೈತರಿಗೆ ಕೇಂದ್ರ ಸರ್ಕಾರದ ನಿರ್ಧಾರಗಳಿಗೆ ತೀವ್ರ ಸಂಕಷ್ಟ ಪರಿಸ್ಥಿತಿ ಎದುರಾಗಿದೆ ಎಂದು ಎಐಎಡಿಎಂಕೆ ಸದಸ್ಯರು ಪ್ರತಿಭಟಿಸಿದರು.
ಪ್ರತಿಭಟನೆ ಮತ್ತು ಗದ್ದಲಗಳಿಂದಾಗಿ ಸದನದಲ್ಲಿ ಕೋಲಾಹಲದ ವಾತಾವರಣ ನಿರ್ಮಾಣವಾಗಿ ಸುಮಿತ್ರಾ ಮಹಾಜನ್ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು. ಆದರೆ ನಂತರ ಸಮಾವೇಶಗೊಂಡ ಸದನದಲ್ಲಿ ಇದೇ ಪರಿಸ್ಥಿತಿ ಮುಂದುವರಿದ ಕಾರಣ ಸಂಸತ್ ನ ಎರಡನೇ ದಿನದ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
parliament, Lok Sabha,adjourned,protested,Rafale jet deal