ಸಚಿವ ಸಂಪುಟ ವಿಸ್ತರಣೆಗೂ, ನನಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ನವದೆಹಲಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೂ, ನನಗೂ ಯಾವುದೇ ಸಂಬಂಧವಿಲ್ಲ ಅದನ್ನು ಪಕ್ಷದ ಮುಖಂಡರು ನೋಡಿಕೊಳ್ಳುತ್ತಾರೆಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ರಾಜಕಾರಣ ಮಾಡಲು ಬಂದಿಲ್ಲ. ಮೇಕೆದಾಟು ಯೋಜನೆ ಬಗ್ಗೆ ರಾಜ್ಯದ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ಮಾತನಾಡಲು ಬಂದಿದ್ದೇನೆ. ಸಚಿವ ಸಂಪುಟ ವಿಸ್ತರಣೆಗೂ, ನನಗೂ ಯಾವುದೇ ಸಂಬಂಧವಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ನಾನೊಬ್ಬ ಮಂತ್ರಿ ಅಷ್ಟೆ. ಪಕ್ಷದ ಮುಖಂಡರು ಸಚಿವ ಸಂಪುಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ. ಅಲ್ಲದೇ ರಾಜ್ಯ ಕೈ ನಾಯಕರು ಹೈಕಮಾಂಡ್ ಭೇಟಿಯ ಬಗ್ಗೆ ನನಗೆ ಮಾಹಿತಿಯಿಲ್ಲವೆಂದು ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಸಮಯಾವಕಾಶ ಕೇಳಿದ್ದೇನೆ. ಅವಕಾಶ ಕೊಟ್ಟರೇ, ಅವರನ್ನು ಭೇಟಿಯಾಗುತ್ತೇನೆ. ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗದ ಒಪ್ಪಿಗೆ ವಿರೋಧಿಸುತ್ತಿರುವ ತಮಿಳುನಾಡು ನಿರಂತರವಾಗಿ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ಬಗ್ಗೆ ಸೂಕ್ತ ಉತ್ತರ ನೀಡುವಂತೆ ರಾಜ್ಯ ಸಂಸದರು ಜಲ ಸಂಪನ್ಮೂಲ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಿಕೊಳ್ಳಲು ಬಂದಿದ್ದೇನೆಂದು ಹೇಳಿದ್ದಾರೆ.

ತಮಿಳುನಾಡಿನ ನಿರಂತರ ಪ್ರತಿಭಟನೆಯಿಂದ ತಪ್ಪು ಸಂದೇಶ ರವಾನೆ ಆಗುವ ಸಾದ್ಯತೆ ಇದೆ. ಹೀಗಾಗಿ ರಾಜ್ಯದ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್ ಹೆಗ್ಡೆ, ರಮೇಶ್ ಜಿಗಜಿಣಗಿ ಸೇರಿದಂತೆ ಎಲ್ಲಾ ಸಂಸದರಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇನೆಂದು ತಿಳಿಸಿದ್ದಾರೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ