ದೇಶಾಭಿಮಾನವನ್ನು ಪ್ರಧಾನಿ ಮೋದಿಗೆ ಗುತ್ತಿಗೆ ಕೊಟ್ಟಿಲ್ಲ-ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಏ.2- ದೇಶದ ಅಭಿಮಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ ಗುತ್ತಿಗೆ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.

ಬೀದರ್ ಜಿಲ್ಲಾ ಪ್ರವಾಸ ಕೈಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದುಗಳು, ನಾವು ಭಾರತೀಯರು.ನಮಗೂ ದೇಶದ ರಕ್ಷಣೆ ಹೇಗೆ ಮಾಡಬೇಕೆಂಬ ಅರಿವಿದೆ ಎಂದು ಹೇಳಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿ ಹೇಗೆ ದೇಶ ಕಾಪಾಡಿದ್ದಾರೆ ಎಂಬುದನ್ನು ಇತಿಹಾಸ ತೆಗೆದುನೋಡಲಿ ಎಂದು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಆಗಲಿ, ವಿರೋಧ ಪಕ್ಷವಾಗಲಿ ಯಾರೂ ಕೂಡ ಉಗ್ರವಾದಕ್ಕೆ ಬೆಂಬಲ ನೀಡುತ್ತಿಲ್ಲ. ಆದರೂ ನರೇಂದ್ರ ಮೋದಿ ಅವರು ಈ ಸಂಬಂಧ ಮಾಡಿರುವ ಭಾಷಣ ಪ್ರಧಾನಿ ಹುದ್ದೆಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಉಗ್ರವಾದವನ್ನು ಬೆಂಬಲಿಸುತ್ತಿದ್ದು, ದೇವೇಗೌಡರು ಕೂಡ ಬೆಂಬಲ ನೀಡುತ್ತಿದ್ದಾರೆ ಎಂಬ ಹೇಳಿಕೆಗೆ ಕುಮಾರಸ್ವಾಮಿ ಮೇಲಿನಂತೆ ಆಕ್ಷೇಪಿಸಿದರು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಲೋಕಸಭೆ ಚುನಾವಣೆ ನಂತರ ಯಾರ್ಯಾರು ಏನೇನಾಗುತ್ತಾರೆ ಎಂಬುದನ್ನು ನೋಡೋಣ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ