ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಖಚಿತ-ಸಚಿವ ವಿ.ಸೋಮಣ್ಣ

ಬೆಂಗಳೂರು,ಸೆ.6- ಈ ಬಾರಿ ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನೂರಕ್ಕೆ ನೂರರಷ್ಟು ಖಚಿತ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮಗೆ ಪಾಲಿಕೆಯಲ್ಲಿ ಅಧಿಕಾರ ಗದ್ದುಗೆ ಸಿಗಬೇಕಿತ್ತು. ಕಾಂಗ್ರೆಸ್-ಜೆಡಿಎಸ್ ಕುತಂತ್ರದಿಂದ ಕೈತಪ್ಪಿತ್ತು. ಈ ಬಾರಿ ಯಾವ ಶಕ್ತಿಗಳಿಂದಲೂ ನಾವು ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಪಾಲಿಕೆಯಲ್ಲೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬಂದರೆ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ. ಅತಿಹೆಚ್ಚು ಸದಸ್ಯರನ್ನು ನಮ್ಮ ಪಕ್ಷವೇ ಹೊಂದಿರುವುದರಿಂದ ಸಹಜವಾಗಿ ನಮ್ಮ ಪಕ್ಷಕ್ಕೆ ಮೇಯರ್ ಮತ್ತು ಉಪಮೇಯರ್ ಸ್ಥಾನ ಸಿಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿರುವುದರಿಂದ ಪಾಲಿಕೆಯಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬರಬೇಕೆಂಬುದು ಬಹುತೇಕರ ಒತ್ತಾಸೆಯಾಗಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಲು ಎಲ್ಲ ರೀತಿಯ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.

ಜನಪ್ರತಿನಿಧಿಗಳು, ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಎಲ್ಲ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತದೆ ಎಂದು ತಿಳಿಸಿದರು.

ಐತಿಹಾಸಿಕ ನಾಡಹಬ್ಬವನ್ನು ಪಕ್ಷಾತೀತವಾಗಿ ಆಚರಿಸಲು ಎಲ್ಲರೂ ಸಹಕಾರ ನೀಡುತ್ತಿದ್ದಾರೆ. ಈಗಾಗಲೇ ಮೈಸೂರಿನಲ್ಲಿ ಖುದ್ದು ನಾನೇ ಜನಪ್ರತಿನಿಧಿಗಳು ಮತ್ತು ಅಧಿಕಾರಗಳ ಸಭೆ ನಡೆಸಿದ್ದೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ದಸರಾ ಹಬ್ಬಕ್ಕೆ ಯಾವುದೇ ಕಿಂಚಿತ್ತೂ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವುದಾಗಿ ಹೇಳಿದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಮಾತನಾಡಿ, ಸೋಮಣ್ಣ ನಮ್ಮ ಪಕ್ಷದ ಪ್ರಮುಖ ನಾಯಕರು. ಪಕ್ಷದ ಸಂಘಟನೆ ಕುರಿತಂತೆ ಚರ್ಚೆ ಮಾಡಿದ್ದೇವೆ. ಮೈಸೂರು ಮತ್ತು ಚಾಮರಾಜನಗರ ಭಾಗಗಳಲ್ಲೂ ಈ ಬಾರಿ ಪಕ್ಷಕ್ಕೆ ಹೆಚ್ಚಿನ ಆನೆ ಬಲ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ