ರಾಜ್ಯ ಬಿಜೆಪಿಯಲ್ಲಿ ಸಣ್ಣಪುಟ್ಟ ಗೊಂದಲಗಳು ಇರುವುದು ನಿಜ: ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಜು.26- ರಾಜ್ಯ ಬಿಜೆಪಿಯಲ್ಲಿ ಸಣ್ಣಪುಟ್ಟ ಗೊಂದಲಗಳು ಇರುವುದು ನಿಜ. ಈ ಗೊಂದಲಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ನಾಯಕರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ, ಅವುಗಳನ್ನು ಬಗೆಹರಿಸಬೇಕಿದೆ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ, ಅದು ಯಡಿಯೂರಪ್ಪನವರಿಗೆ ಮತ್ತು ಕೇಂದ್ರ ವರಿಷ್ಠರಿಗಷ್ಟೇ ಗೊತ್ತು ಎಂದಿದ್ದಾರೆ.

2019ರಲ್ಲಿ ಕಾಂಗ್ರೆಸ್ -ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಪತನಗೊಳಿಸಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿತು. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಇಂದು ಎರಡು ವರ್ಷ ಪೂರೈಸುತ್ತಿದೆ.

ಈ ಎರಡು ವರ್ಷಗಳಲ್ಲಿ ನಾಯಕತ್ವದ ಬಗ್ಗೆ ಆಗಾಗ ಗೊಂದಲ, ವದಂತಿಗಳು ಕೇಳಿ ಬರುತ್ತಲೇ ಇದೆ. ಬಿಜೆಪಿ ನಾಯಕರೊಳಗೆ ಸಹ ಸಾಕಷ್ಟು ಭಿನ್ನಮತ ಕಂಡುಬಂದಿತ್ತು.

ಇಂದು ಎರಡು ವರ್ಷ ಪೂರೈಸುವ ಹಿನ್ನೆಲೆಯಲ್ಲಿ ಬಿಜೆಪಿ ಸಾಧನಾ ಕಾರ್ಯಕ್ರಮವನ್ನು ವಿಧಾನಸೌಧದಲ್ಲಿ ಹಮ್ಮಿಕೊಂಡಿದೆ.

ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ಕೆಲಸಗಳು, ಸಾಧನೆಗಳನ್ನು ಸಾರುವ ಪುಸ್ತಕವನ್ನು ಬಿಡುಗಡೆ ಮಾಡಿ ಸಿಎಂ ಯಡಿಯೂರಪ್ಪ ಮಾತನಾಡಲಿದ್ದಾರೆ.

ಅದರಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರಸ್ತಾಪಿಸಲಿದ್ದಾರೆಯೇ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ