ಸಚಿವ ಸಂಪುಟ ರಚನೆಯಾಗಬೇಕೆಂಬ ಹಿನ್ನೆಲೆ: ಒಂದು ಡಜನ್‍ಗೂ ಅಧಿಕ ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ

The flags are a lotus

ಬೆಂಗಳೂರು, ಆ.2- ಸಚಿವ ಸಂಪುಟ ರಚನೆಯಾಗಬೇಕೆಂಬ ಹಿನ್ನೆಲೆಯಲ್ಲಿ ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಮಾಜಿ ಸಚಿವರಾದ ಲಕ್ಷ್ಮಣ್ ಸವದಿ, ಸಿ.ಸಿ.ಪಾಟೀಲ್, ರಾಜುಗೌಡ ನಾಯಕ್, ಶಾಸಕರಾದ ಸತೀಶ್ ರೆಡ್ಡಿ, ಅರವಿಂದ್ ಬೆಲ್ಲದ್ ಸೇರಿದಂತೆ ಸುಮಾರು ಒಂದು ಡಜನ್‍ಗೂ ಹೆಚ್ಚಿನ ಶಾಸಕರು ದೆಹಲಿಯಲ್ಲಿ ತಂಗಿದ್ದಾರೆ.

ತಮ್ಮ ತಮ್ಮ ಗಾಡ್‍ಫಾದರ್‍ಗಳ ಮೂಲಕ ಸಂಪುಟಕ್ಕೆ ಸೇರಲು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೇಲೆ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ.

ನಿನ್ನೆಯಷ್ಟೇ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡುವ ವಿಫಲ ಪ್ರಯತ್ನ ನಡೆಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಪ್ರಹ್ಲಾದ್ ಜೋಷಿ ಮೂಲಕ ಸಿಎಂಗೆ ಬೆಲ್ಲದ್ ಸಂಪುಟ ಸೇರಲು ನಿರಂತರವಾಗಿ ಒತ್ತಡ ಹಾಕುವ ಪ್ರಯತ್ನವನ್ನು ಮುಂದುವರೆಸಿದ್ದಾರೆ.

ಆದರೆ ಬೆಲ್ಲದ್‍ಗೆ ಮಾಜಿ ಸಚಿವ ಜಗದೀಶ್ ಶೆಟ್ಟರ್ ಮತ್ತು ಜೋಷಿಯೇ ಅಡ್ಡಿಯಾಗಿರುವುದರಿಂದ ಅವರ ಸಂಪುಟ ಸೇರ್ಪಡೆಗೆ ನೂರೆಂಟು ವಿಘ್ನಗಳು ಎದುರಾಗಿವೆ.

ಅಚ್ಚರಿ ಎಂಬಂತೆ ಉಪಮುಖ್ಯಮಂತ್ರಿ ಸ್ಥಾನ ಪಡೆದಿದ್ದ ಲಕ್ಷ್ಮಣ್ ಸವದಿ ಕೂಡ ಈಗ ಸಂಪುಟ ಸೇರ್ಪಡೆಯಾಗಲು ಸರ್ಕಸ್ ನಡೆಸುತ್ತಿದ್ದಾರೆ.

ಎರಡು ದಿನಗಳಿಂದ ದೆಹಲಿಯಲ್ಲೇ ಬೀಡುಬಿಟ್ಟಿರುವ ಅವರು ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಆದರೆ ಸವದಿಗೆ ಈ ಬಾರಿ ಸಚಿವ ಸ್ಥಾನ ಸಿಗುವುದು ಕಷ್ಟಸಾಧ್ಯ ಎನ್ನಲಾಗುತ್ತಿದೆ.

ಮಾಜಿ ಸಚಿವ ಸಿ.ಸಿ.ಪಾಟೀಲ್ ಕೂಡ ನಿನ್ನೆಯಿಂದಲೇ ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಪಂಚಮಸಾಲಿ ಸಮುದಾಯದಿಂದ ಈ ಬಾರಿ 2ರಿಂದ 3ರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಂಭವವವಿದೆ ಎಂದು ಹೇಳಲಾಗುತ್ತಿದೆ.

ಇದರಲ್ಲಿ ಈಗಾಗಲೇ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಖಚಿತವಾಗಿರುವುದರಿಂದ ಮತ್ತೊಂದೆಡೆ ಶಂಕರ್ ಪಟೇಲ್ ಮುನೇನಕೊಪ್ಪ ಕೂಡ ಈ ಬಾರಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ಉಳಿಯಲಿರುವ ಒಂದು ಸ್ಥಾನಕ್ಕೆ ಶಾಸಕರಾದ ಅರವಿಂದ್ ಬೆಲ್ಲದ್, ಸಿ.ಸಿ.ಪಾಟೀಲ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ.

ಕಳೆದ ಬಾರಿ ಸಂಪುಟ ವಿಸ್ತರಣೆಯಾದ ವೇಳೆ ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ, ಸಿಎಂ ಬೊಮ್ಮಾಯಿ ಅವರಿಗೆ ದುಂಬಾಲು ಬಿದ್ದಿದ್ದಾರೆ.

ದೆಹಲಿಯಲ್ಲಿರುವ ಅವರು ನಿನ್ನೆಯಿಂದಲೇ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿ ಈ ಬಾರಿ ಸಂಪುಟಕ್ಕೆ ತೆಗೆದುಕೊಳ್ಳಲು ಸಿಎಂಗೆ ನಿರ್ದೇಶನ ನೀಡುವಂತೆ ಬೇರೆ ಬೇರೆ ನಾಯಕರ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ.

ಹೀಗೆ ಬಹುತೇಕ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಂಪುಟಕ್ಕೆ ಸೇರಲು ಕೊನೆಯ ಪ್ರಯತ್ನವನ್ನು ಮುಂದುವರೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ